ಬೇಡಿಕೆ ಈಡೇರಿಸಲು ಸಿಐಟಿಯು ಪ್ರತಿಭಟನೆ
ಗುಡಿಬಂಡೆ: ಕಾರ್ಮಿಕರಿಗೆ ವಸತಿ, ಭವಿಷ್ಯನಿಧಿ ಯೋಜನೆ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಕಾರ್ಯಕರ್ತರು ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.
ಸಿಐಟಿಯು ತಾಲೂಕು ಕಾರ್ಯದರ್ಶಿ ಭಾಗ್ಯಮ್ಮ ಮಾತನಾಡಿ, ದುಡಿಯುವ ಕೈಗಳಿಗೆ ಉದ್ಯೋಗ ಲಭಿಸುತ್ತಿಲ್ಲ. ಉದ್ಯೋಗವಿದ್ದರೂ ಸರಿಯಾದ ವೇತನ ನೀಡುತ್ತಿಲ್ಲ. ಇದರಿಂದ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸೀಲುಕಿದ್ದಾರೆ. ಹೀಗಾಗಿ ವೇತನ ತಾರತಮ್ಯ ತಡೆಯಬೇಕು. ಕಾರ್ಮಿಕರಿಗೆ ಕನಿಷ್ಠ 18 ಸಾವಿರ ರೂ.ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ಪ್ರಕಾರ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಖಾಯಂಗೊಳಿಸಬೇಕು. ಕನಿಷ್ಠ ವೇತನವನ್ನು 10,500 ರೂ. ಹಾಗೂ ನಿವೃತ್ತಿ ವೇತನ 6 ಸಾವಿರ ರೂ.ಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು.
ಅಂಗನವಾಡಿಗಳಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿಯರಾಗಿ ಕಾರ್ಯನಿರ್ವಹಿಸುತ್ತಿರುವವರ ವಿದ್ಯಾರ್ಹತೆ ಹಾಗೂ ಸೇವಾವಧಿಯನ್ನು ಗಣನೆಗೆ ತೆಗೆದುಕೊಂಡು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ.50ರಷ್ಟು ಜನರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಸಿಐಟಿಯು ತಾಲೂಕು ಅಧ್ಯಕ್ಷೆ ಪಿ.ಕೆ. ಶುಭ, ಕಾರ್ಯಕರ್ತರಾದ ರತ್ನಮ್ಮ, ಸುಜಾತ ಪುಮೀಶ, ಆಯಿಷ, ಅನಿತಾ, ನಂಜಮ್ಮ, ಲಕ್ಷ್ಮೀ, ಲಲಿತಮ್ಮ ಸೇರಿದಂತೆ ಹಲವರು ಹಾಜರಿದ್ದರು.